ಕೊಡಗು: ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಲ್ದಾರೆ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಉಸ್ಮಾನ್ ಹಾಗೂ ರಾಮನ್ ಎಂಬವರುಗಳೇ ಗಂಭೀರ ಗಾಯಗೊಂಡವರಾಗಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬುಧವಾರ ಬೆಳಗ್ಗೆ ಮಾಲ್ದಾರೆಯಿಂದ ಸಿದ್ದಾಪುರಕ್ಕೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ವೇಳೆ ಗಾರೆಕಟ್ಟೆ ಎಂಬಲ್ಲಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಈ ಸಂದರ್ಭ ಕಾರ್ಮಿಕರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ.
ಗಾಯಾಳುಗಳನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಡಾನೆ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.