ಮಡಿಕೇರಿ : ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ನಿಯಮಗಳನ್ನು ಪಾಲಿಸಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಗಮನಹರಿಸಬೇಕು. ಚುನಾವಣೆಗೆ ನಿಯೋಜಿಸಿರುವ ವಿವಿಧ ತಂಡಗಳು ತಮ್ಮ ವ್ಯಾಪ್ತಿಯಲ್ಲಿನ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚುನಾವಣಾ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಪ್ರಚಾರ, ಸಭೆ ಮತ್ತು ಮೆರವಣಿಗೆ ಸಂದರ್ಭದಲ್ಲಿ ಅನುಮತಿ ಪಡೆದಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ವಿಡಿಯೋ ರೆಕಾರ್ಡಿಂಗ್ ತಂಡ ರೆಕಾರ್ಡ್ ಮಾಡಿಕೊಳ್ಳಬೇಕು. ಚುನಾವಣೆ ಸಂಬಂಧ ವಿವಿಧ ತಂಡದ ಅಧಿಕಾರಿಗಳು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಅಬಕಾರಿ, ಪೊಲೀಸ್, ಕಂದಾಯ ಹಾಗೂ ವಿವಿಧ ತಂಡಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣಾ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು, ವಿಧಾನ ಪರಿಷತ್ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ಮಾಹಿತಿ ನೀಡಿದರು.