ಮಂಡ್ಯ: ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಹುಡುಕಿಕೊಂಡು ಕೂಲಿ ಕಾರ್ಮಿಕರು ವಲಸೆಹೋಗುತ್ತಿದ್ದು, ಇದನ್ನು ತಡೆಯುವ ಸಲುವಾಗಿ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಜಾರಿ ತಂದಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿನಾಟಕಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಕಲಾ ತಂಡಗಳು ಗ್ರಾಮೀಣ ಪ್ರದೇಶಗಳಲ್ಲಿ ನಾಟಕಗಳ ಮೂಲಕ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅರಿವು ಮೂಡಿಸುತ್ತಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ನಾಗಮಂಗಲ ವತಿಯಿಂದ ನಾಗಮಂಗಲ ತಾಲೂಕಿನ ಆಯ್ದ 15 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕುರಿತು ಅರಿವು ಮತ್ತು ಜಾಗೃತಿ ಮೂಡಿಸುವ ಬೀದಿನಾಟಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಕಲಾ ತಂಡಗಳು ಆಯ್ದ ಸ್ಥಳಗಳಲ್ಲಿ ಬೀದಿ ನಾಟಕಳಗಳನ್ನು ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಜನರನ್ನು ಸೆಳೆಯುತ್ತಿದ್ದಾರೆ. ಅಷ್ಟೇ ಅಲ್ಲದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಕಾರ್ಯಕ್ರಮದ ವೇಳೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ ಹಾಗೂ ಸಹಾಯಕ ನಿರ್ದೇಶಕಿ ಮೇನಕಾ, ಐಇಸಿ ಸಂಯೋಜಕಿ ರೇಖಾ, ಶಿವಗಂಗಾ, ಸಾಂಸ್ಕೃತಿಕ ಕಲಾ ತಂಡದ ಕಲಾವಿದರಾದ ಸಂತೆಕಸಲಗೆರೆ ಬಸವರಾಜ್, ಮಂಟೇಲಿಂಗಯ್ಯ, ಅಂದಾನಿ, ಅನುಸೂಯ, ಸುವರ್ಣ ಗೀತಾ ಮತ್ತಿತರರು ಭಾಗವಹಿಸಿದ್ದರು.