ಮಂಡ್ಯ: ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಕಚೇರಿ ಬಳಿ ಪಲ್ಟಿಯಾಗಿದೆ.
ಮೈಸೂರಿನ ಎಪಿಎಂಸಿ ಮಾರುಕಟ್ಟೆಯಿಂದ ಬುಧವಾರ ಮಾವಿನಕಾಯಿ ಲೋಡ್ ಮಾಡಿಕೊಂಡು ಆಂಧ್ರಪ್ರದೇಶದ ಚಿತ್ತೂರಿಗೆ ಲಾರಿ ಹೋಗುತ್ತಿತ್ತು.
ಮಾರ್ಗಮಧ್ಯೆ ಮದ್ದೂರಲ್ಲಿ ಕಾರನ್ನು ಹಿಂದಿಕ್ಕುವ ಭರದಲ್ಲಿ ಹೋದ ಲಾರಿ ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾಗಿದೆ. ರಸ್ತೆಬದಿ ಮಾವಿನ ಕಾಯಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.