ಮಂಡ್ಯ: ರಾಜ್ಯದಲ್ಲಿ ತೀವ್ರ ಬರದ ಸ್ಥಿತಿಯಿದೆ. ಈ ಕಾರಣದಿಂದ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಮನವಿ ಮಾಡಿದರು.
ತಾಲ್ಲೂಕಿನ ಕೆಆರ್ ಎಸ್ ನಲ್ಲಿ ಶುಕ್ರವಾರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಜಲಾಶಯದ ನೀರಿನ ಮಟ್ಟ, ಕುಡಿಯುವ ನೀರಿನ ಲಭ್ಯತೆ ಹಾಗೂ ರೈತರ ಬೆಳೆಗೆ ನೀರು ಕೊಡುವ ಬಗ್ಗೆ ಚರ್ಚೆ ನಡೆಸಿದರು. ನಂತರ ಸ್ಥಳೀಯ ಶಾಸಕರು, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದ ಸಚಿವರು, ಜಲಾಶಯದಲ್ಲಿ ನೀರು ಕಡಿಮೆ ಇರುವುದರಿಂದ, ಮುಂದೆ ಬೇಸಿಗೆ ಎದುರಾಗುವುದರಿಂದ ಜನ, ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ಮಳೆ ಕಡಿಮೆಯಾಗಿದ್ದರಿಂದ ಕಾವೇರಿ ಜಲಾನಯನ ಪ್ರದೇಶದ ಯಾವುದೇ ಅಣೆಕಟ್ಟೆಗಳು ಭರ್ತಿಯಾಗಿಲ್ಲ. ಆದರೂ ನದಿ ಪಾತ್ರದ ರೈತರ ಹಿತದೃಷ್ಠಿಯಿಂದ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನವೆಂಬರ್ ಅಂತ್ಯದವರೆಗೂ ನೀರು ಹರಿಸಲಾಗಿದೆ ಎಂದು ವಿವರಿಸಿದರು.