ನಂಜನಗೂಡು: ಇತ್ತೀಚಿನ ಕೆಲ ತಿಂಗಳುಗಳಿಂದ ನಂಜನಗೂಡಿನ ಕಂದಾಯ ಇಲಾಖೆಯಲ್ಲಿ ರೈತರ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಕುಂಠಿತವಾಗುತ್ತಿದೆ. ಭೂಗಳ್ಳರು ಮತ್ತು ಹಣ ಉಳ್ಳವರ ಕೆಲಸ ಕಾರ್ಯಗಳು ತ್ವರಿತವಾಗಿ ನಡೆಯುತ್ತಿವೆ ಇದಕ್ಕೆಲ್ಲ ಪ್ರಮುಖ ಕಾರಣ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರ ನಿರ್ಲಕ್ಷ್ಯ ಕಾರ್ಯವೈಕರಿ ಎಂದು ಆರೋಪಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ವಿದ್ಯಾಸಾಗರ್ ತಾಲ್ಲೂಕು ಅಧ್ಯಕ್ಷ ಸತೀಶ್ ನೇತೃತ್ವದಲ್ಲಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಸಾಕಷ್ಟು ಬಾರಿ ಸ್ಥಳೀಯ ಶಾಸಕರಿಗೆ ಮತ್ತು ತಹಶೀಲ್ದಾರ್ ಅವರ ಗಮನಕ್ಕೆ ರೈತರು ಸಾಕಷ್ಟು ಸಮಸ್ಯೆಗಳನ್ನು ತಿಳಿಸಲಾಗಿದೆ.

ಯಾವುದೇ ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ತಾಲ್ಲೂಕು ಆಡಳಿತ ಮತ್ತು ಶಾಸಕಾಂಗ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ಭೂಗಳ್ಳರು ಮತ್ತು ಹಣ ಉಳ್ಳವರ ಕೆಲಸ ಕಾರ್ಯಗಳು ತಹಶೀಲ್ದಾರ್ ಕಛೇರಿಯಲ್ಲಿ ಲೀಲಾಜಾಲವಾಗಿ ನಡೆಯುತ್ತಿವೆ. ರೈತರ ಕೆಲಸ ಕಾರ್ಯಗಳಿಗೆ ಸ್ಪಂದಿಸದ ತಾಲ್ಲೂಕು ಆಡಳಿತದ ಅಧಿಕಾರಿಗಳು ಮತ್ತು ತಹಶೀಲ್ದಾರ್ ವಿರುದ್ಧ ರಾಜ್ಯ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಬೇಕು.

ಕೂಡಲೇ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ರವರನ್ನು ವರ್ಗಾವಣೆಗೊಳಿಸಬೇಕು ಎಂದು ಆಗ್ರಹಿಸಿದರು. ರೈತರ ಕೆಲಸ ಕಾರ್ಯಗಳು ನಡೆಯುವ ತನಕ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ನಾಳೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಇರುವುದರಿಂದ ಪ್ರತಿಭಟನಾ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಗೌರವಿಸುತ್ತೇವೆ. ನಿರ್ಲಕ್ಷ್ಯತನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ತನಕ ಪ್ರತಿಭಟನೆಯನ್ನು ಕೈಬಿಡುವುದಿಲ್ಲ‌ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ವಿದ್ಯಾಸಾಗರ್ ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ಜಿಲ್ಲಾ ಕಾರ್ಯದರ್ಶಿ ಇಮ್ಮಾವು ರಘು, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತ ಸೇರಿದಂತೆ ನೂರಾರು ರೈತರು ಹಾಜರಿದ್ದರು.