ನಂಜನಗೂಡು: ಗೌರಿ–ಗಣೇಶ ಹಬ್ಬದ ದಿನವೇ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ತಾಯೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬಿಳುಗಲಿ ಗ್ರಾಮದ ಮಂಜುನಾಥ್ (36) ಎಂದು ಗುರುತಿಸಲಾಗಿದೆ. ಮಂಜುನಾಥ್ ಕಾಣೆಯಾಗಿರುವ ಕುರಿತು ಅವರ ಪತ್ನಿ ಬಿಳಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಡುವೆ ತಾಯೂರು ಗ್ರಾಮದ ಬಳಿ ಇರುವ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ಅದು ಕಾಣೆಯಾಗಿದ್ದ ಮಂಜುನಾಥ್ ಅವರದ್ದೇ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಯಿತು.

ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.