ನಂಜನಗೂಡು: ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮ ಪಂಚಾಯತಿ ಸ್ವಚ್ಛತಾಗಾರರ ದಿನಾಚರಣೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು.

ನಮ್ಮ ಸಮಾಜದ ಸ್ವಚ್ಛತೆಗೆ ಅಮೂಲ್ಯ ಕೊಡುಗೆ ನೀಡುತ್ತಿರುವ ಸ್ವಚ್ಛತಾಗಾರರನ್ನು ಮತ್ತು ಹೆಚ್ಚಿನ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಸ್ವಚ್ಛತಾಗಾರರ ಸೇವೆ ಸಮಾಜದ ಆರೋಗ್ಯ ಮತ್ತು ಅಭಿವೃದ್ಧಿಗೆ ಅತ್ಯಂತ ಮುಖ್ಯವಾದುದು. ಅವರ ಪರಿಶ್ರಮವನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಚಲುವರಾಜ್, ಪ್ರಕಾಶ್, ಮಹದೇವ ನಾಯಕ, ನಂಜಪ್ಪ, ಮುರುಗೇಶ್, ನಂಜುಂಡ, ಗಾಯತ್ರಿ ಮೋಹನ್ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.