ಮೈಸೂರು: ನಂಜನಗೂಡು ನಗರದಲ್ಲಿರುವ ತಾಯಿ-ಮಕ್ಕಳ ಆಸ್ಪತ್ರೆಗೆ ಮಧ್ಯರಾತ್ರಿ ಶಾಸಕ ದರ್ಶನ್ ಧ್ರುವನಾರಾಯಣ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾತ್ರೋರಾತ್ರಿ ಶಾಸಕರನ್ನು ಕಂಡ ವೈದ್ಯರು ಮತ್ತು ಸಿಬ್ಬಂದಿಗಳು ಶಾಕ್ ಆಗಿದ್ದಾರೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ, ತುರ್ತು ಚಿಕಿತ್ಸಾ ವಿಭಾಗ, ಶೌಚಾಲಯ ಔಷಧೀಯ ಉಗ್ರಾಣ ಸೇರಿದಂತೆ ವೈದ್ಯರು ಮತ್ತು ಸಿಬ್ಬಂದಿಗಳ ಕಾರ್ಯವೈಖರಿ, ಸ್ವಚ್ಛತೆ, ರೋಗಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.

ಆಸ್ಪತ್ರೆಯಲ್ಲಿದ್ದ ರೋಗಿಗಳ ಆರೋಗ್ಯ ವಿಚಾರಿಸಿ ಸಮರ್ಪಕವಾಗಿ ಸೇವೆ ನೀಡುತ್ತಿದ್ದಾರೆಯೇ ಎಂದು ಶಾಸಕರು ಮಾಹಿತಿ ಪಡೆದುಕೊಂಡರು. ರಾತ್ರಿ ಪಾಳಿಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಮೈಸೂರಿಗೆ ಕಳುಹಿಸುತ್ತಿದ್ದಾರೆ ಎಂಬ ಸಾರ್ವಜನಿಕರು ದೂರಿನ ಆಧಾರದ ಮೇಲೆ ಶಾಸಕರು ಮಧ್ಯರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಾತ್ರಿ ಸಮಯದಲ್ಲಿ ಸಾರ್ವಜನಿಕರೊಂದಿಗೆ ವೈದ್ಯರು ಮತ್ತು ಸಿಬ್ಬಂದಿಗಳು ಸ್ಪಂದಿಸಬೇಕು. ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೆ ಚಕ್ಕರ್ ಹಾಕುವ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಶಾಸಕ ದರ್ಶನ್ ಧ್ರುವನಾರಾಯಣ್ ರವರ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.