ಮೈಸೂರು: ದಸರಾ ಉತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದೆ. ದಸರಾ ಉತ್ಸವಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಆಹ್ವಾನಿಸಲಾಗಿದೆ. ದಸರಾಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯುವ ದಸರಾಗೆ ನಟ ಕಿಚ್ಚ ಸುದೀಪ್ ಅವರು ಆಗಮಿಸುತ್ತಿಲ್ಲ. ಅನಿವಾರ್ಯ ಕಾರಣಗಳಿಂದ ಫಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಚಾರದ ಕೊರತೆ ಆಗಿಲ್ಲ, ಅಂತಹದೇನಾದರು ಸಮಸ್ಯೆ ಇದ್ದರೆ ಪರಿಹರಿಸಲಾಗುವುದುಎಂದು ಹೇಳಿದರು.
ದಸರಾ ಕಾರ್ಯಕ್ರಮಗಳಲ್ಲಿ ಶಾಸಕ ರಾಮದಾಸ್ ಅವರು ಪಾಲ್ಗೊಳ್ಳುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಮದಾಸ್ ಅವರು ಮೋದಿ ಯುಗ ಉತ್ಸವ ಮಾಡುತ್ತಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ಸೋಮವಾರ ರಾಷ್ಟ್ರಪತಿಗಳು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಆರು ಕೇಂದ್ರ ಸಚಿವರು, ನಾಲ್ವರು ರಾಜ್ಯ ಸಚಿವರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.