ಮೈಸೂರು: ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ವರಮಹಾಲಕ್ಷ್ಮಿ ಹಬ್ಬದಂದು (ಶುಕ್ರವಾರ) ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇಂದು ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವರ ದರ್ಶನ ಮಾಡಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ನಿತ್ಯದ ಪೂಜಾ ಕೈಂಕರ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಸಾಮಾನ್ಯವಾಗಿ ವರಮಹಾಲಕ್ಷ್ಮೀ ಹಬ್ಬದ ದಿನ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬರುವ ಸಾಧ್ಯತೆ ಇರುತ್ತದೆ. ಇದರಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಬಹುದೆಂದು ನಿರ್ಬಂಧ ಹೇರಲಾಗಿದೆ.