ನಂಜನಗೂಡು: ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆ ಮುಂಭಾಗದಲ್ಲಿ ರೈತರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ಇಂದು ಬುಧವಾರ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ರೈತರು ಕಾರ್ಖಾನೆಯ ಮುಂಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಸುಮಾರು 45ಕ್ಕೂ ಹೆಚ್ಚು ಕುಟುಂಬದ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡಬೇಕು. ನಮ್ಮ ಮಕ್ಕಳಿಗೆ ಉದ್ಯೋಗ ನೀಡಿ, ಇಲ್ಲವಾದಲ್ಲಿ ನಮ್ಮ ಕೃಷಿ ಭೂಮಿ ನಮಗೆ ವಾಪಸ್ ಕೊಡಿ ಎಂದು ಕಾರ್ಖಾನೆಯ ಬಾಗಿಲನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿಯ ತನಕ ಅಧಿಕಾರಿಗಳಾಗಲೀ ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ ಎಂದು ರೈತರು ಕಿಡಿಕಾರಿದ್ದಾರೆ. ರೈತರು ಕಾರ್ಖಾನೆಯ ಮುಂಭಾಗದಲ್ಲಿಯೇ ವಾಸವಾಗಿರುವುದರಿಂದ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕ ಬಸವರಾಜು ಎಚ್ಚರಿಕೆ ನೀಡಿದ್ದಾರೆ.