ನಂಜನಗೂಡು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಡಾ. ಬಿ.ಎಸ್. ಮಹದೇವಸ್ವಾಮಿ ನೇಮಕಗೊಂಡಿದ್ದು, ಕಾಲೇಜಿನ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಅಭಿವೃದ್ಧಿಗೆ ಹೊಸ ವೇಗ ದೊರೆಯುವ ನಿರೀಕ್ಷೆ ಮೂಡಿದೆ.

ಕಾಲೇಜಿನಲ್ಲಿ ಇದುವರೆಗೆ ಪ್ರಭಾರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಪಿ. ಶಿವಣ್ಣ ಅವರು ನೂತನ ಪ್ರಾಂಶುಪಾಲರಾದ ಡಾ. ಬಿ.ಎಸ್. ಮಹದೇವಸ್ವಾಮಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಖಾಯಂ ಪ್ರಾಂಶುಪಾಲರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳದೆ, ಪ್ರಭಾರ ಪ್ರಾಂಶುಪಾಲರ ಮೂಲಕವೇ ಆಡಳಿತ ನಿರ್ವಹಿಸಲಾಗುತ್ತಿತ್ತು. ಇದೀಗ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಶೈಕ್ಷಣಿಕ ಸಾರಥ್ಯ ಕಾರ್ಯಕ್ರಮದಡಿ ಪ್ರಾಂಶುಪಾಲರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

2022ರಲ್ಲಿ 310 ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ವಿವಿಧ ಹಂತಗಳ ಆಯ್ಕೆ ಹಾಗೂ ದಾಖಲೆ ಪರಿಶೀಲನೆ ಪ್ರಕ್ರಿಯೆ ಬಳಿಕ ಮೊದಲ ಹಂತದಲ್ಲಿ 222 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. ಈ ಮೂಲಕ ಸರ್ಕಾರಿ ಕಾಲೇಜುಗಳ ಆಡಳಿತಕ್ಕೆ ಹೊಸ ಚೈತನ್ಯ ನೀಡುವ ಪ್ರಯತ್ನ ನಡೆದಿದೆ.

ಮೂಲತಃ ಚಾಮರಾಜನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ.ಎಸ್. ಮಹದೇವಸ್ವಾಮಿ ಅವರು ಸರ್ಕಾರದ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 48ನೇ ರ‍್ಯಾಂಕ್ ಗಳಿಸುವ ಮೂಲಕ ನಂಜನಗೂಡು ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಪ್ರಾಂಶುಪಾಲರಾದ ಡಾ. ಬಿ.ಎಸ್. ಮಹದೇವಸ್ವಾಮಿ ಅವರು, ಸರ್ಕಾರಿ ಕಾಲೇಜುಗಳು ಗ್ರಾಮೀಣ ಹಾಗೂ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಪ್ರಮುಖ ಆಶಾಕಿರಣಗಳಾಗಿವೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದರ ಜೊತೆಗೆ ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಉನ್ನತೀಕರಿಸುವುದು ನನ್ನ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.

ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿ, ಗ್ರಂಥಾಲಯ ಮತ್ತು ಪ್ರಯೋಗಾಲಯಗಳ ಬಲವರ್ಧನೆ, ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಶೈಕ್ಷಣಿಕ ಸಂಬಂಧ ಬೆಳೆಸುವುದು, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಸೇರಿದಂತೆ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹೆಚ್ಚಿಸುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೂಕ್ತ ಮಾರ್ಗದರ್ಶನ, ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಹಾಗೂ ಉನ್ನತ ಶಿಕ್ಷಣದ ಅವಕಾಶಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ಮಾಡಲಾಗುವುದು. ಪೋಷಕರು, ಹಳೆಯ ವಿದ್ಯಾರ್ಥಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಕಾಲೇಜನ್ನು ಶೈಕ್ಷಣಿಕವಾಗಿ ಮಾದರಿ ಸಂಸ್ಥೆಯನ್ನಾಗಿ ರೂಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರೊ.ಪಿ ಶಿವಣ್ಣ, ಚಾಮರಾಜನಗರ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶೈಲೇಶ್ ಕುಮಾರ್, ವಿ.ವಿ ದೈಹಿಕ ಶಿಕ್ಷಣ ನಿರ್ದೇಶಕ ಶಾಂತರಾಜು, ಯೋಗೇಶ್ ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಹಾಜರಿದ್ದರು.