ನಂಜನಗೂಡು: ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂಜನಗೂಡು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಒಗಳೊಂದಿಗೆ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ತಾಕೀತು ಮಾಡಿದರು.
ಸಭೆಯಲ್ಲಿ ಮಾತನಾಡಿದ ಶಾಸಕರು, “ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಗ್ಗೆ ಯಾವುದೇ ದೂರುಗಳು ಬಾರದಂತೆ ಅಧಿಕಾರಿಗಳು ಮುಂಚಿತವಾಗಿಯೇ ಕ್ರಮವಹಿಸಬೇಕು. ಟ್ಯಾಂಕರ್, ಬೋರ್‌ವೆಲ್ ದುರಸ್ತಿ, ನೀರಿನ ಪೈಪ್‌ಲೈನ್ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಜನರ ಸಮಸ್ಯೆಗೆ ನಿರ್ಲಕ್ಷ್ಯ ಮಾಡಬಾರದು” ಎಂದು ಖಡಕ್ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ವೈಕುಂಠ ಕೃಷ್ಣ, ಆಯುಷ್ ಇಲಾಖೆ, ಡಾ. ರೇಣುಕಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

