ಮೈಸೂರು: ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ಯಾಂಪ್ರಸಾದ್ (46) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಪೊಲೀಸ್ ಲೇಔಟ್ನಲ್ಲಿ ನಡೆದಿದೆ.
ಕಳೆದ ಐದು ವರ್ಷಗಳಿಂದ ದೇವರಾಜ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದ ಶ್ಯಾಂಪ್ರಸಾದ್ ಅವರು ಪೊಲೀಸ್ ಲೇಔಟ್ನಲ್ಲಿ ಸ್ವಂತ ಮನೆ ಹೊಂದಿದ್ದರು. ಮಂಗಳವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಬೆಳಿಗ್ಗೆ ಶ್ಯಾಂಪ್ರಸಾದ್ ಅವರು ಡ್ಯೂಟಿಗೆ ಹಾಜರಾಗದಿದ್ದಾಗ, ಅನುಮಾನಗೊಂಡ ಸಿಬ್ಬಂದಿ ಅವರ ಮನೆಗೆ ತೆರಳಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ನಜರ್ಬಾದ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ಶ್ಯಾಂಪ್ರಸಾದ್ ಅವರು ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದೇ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

