ನಂಜನಗೂಡು: ಪೊಲೀಸ್ ಸಿಬ್ಬಂದಿಯೊರ್ವ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟದಲ್ಲಿ ತೋಡಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಮಸಣಶೆಟ್ಟಿ (33) ಎಂಬುವವರು ನಾಪತ್ತೆಯಾಗಿರುವ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಡಿಜಿ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಂಜನಗೂಡು ತಾಲ್ಲೂಕಿನ ಹೊಸಕೋಟೆ ಗ್ರಾಮದ ಹೆಚ್.ಡಿ ಮಸಣಶೆಟ್ಟಿ ರವರು ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಅಕ್ಕನ ಮನೆಗೆ ಪತ್ನಿ ಹಾಗೂ ಮಗುವಿನೊಂದಿಗೆ ಬಂದಿದ್ದರು.

ಮಾರ್ಚ್ 3ರ ಸೋಮವಾರ ಹೊರಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ ಎಂದು ಸಹೋದರ ಮಹದೇವ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಚಹರೆ: ಮನೆಯಿಂದ ಹೊರಗೆ ಹೋಗುವಾಗ ಬಿಳಿ ಮತ್ತು ಕಪ್ಪು ಬಣ್ಣದ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ದುಂಡು ಮುಖ ಎಣ್ಣೆಗೆಂಪು ಬಣ್ಣ,5.6 ಅಡಿ ಎತ್ತರ ಇದ್ದು, ಇವರ ಸುಳಿವು ಸಿಕ್ಕಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08221-226259 ಗೆ ಸಂಪರ್ಕಿಸುವಂತೆ ಕೋರಿದ್ದಾರೆ.

ಅಲ್ಲದೆ ಪೊಲೀಸ್ ಸಿಬ್ಬಂದಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರೇ ಹುಡುಕಾಟದಲ್ಲಿ ನಿರತರಾಗಿದ್ದು, ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.