ನಂಜನಗೂಡು: ಕರ್ತವ್ಯದ ಮೇಲಿದ್ದ ಕ್ಷೇತ್ರಶಿಕ್ಷಣಾಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ನಗರದ ಚಿಂತಾಮಣಿ ಗಣಪತಿ ದೇವಾಲಯದಿಂದ ರಾಷ್ಟ್ರೀಯ ಹೆದ್ದಾರಿಯ ಮೂಲಕ ತಾಲ್ಲೂಕು ಕಛೇರಿ ಅವರಿಗೆ ಕಾಲ್ನಡಿಗೆ ಜಾಥಾ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಚಪ್ಪಲಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ನ.21 ರಂದು ನಂಜನಗೂಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆಯನ್ನು ನಡೆಸಲಾಗುತ್ತಿತ್ತು. ಊಟದ ಸಮಯದಲ್ಲಿ ಬಿಳುಗಲಿ ಗ್ರಾಮದ ಕುಮಾರ್ ಎಂಬಾತ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಹೇಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ.

ಅಲ್ಲದೆ ಬೆದರಿಕೆ ಹಾಕಿದ್ದಾರೆ ಈಗಾಗಲೇ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಈ ಘಟನೆಯಿಂದ ತಾಲ್ಲೂಕಿನ ಇತರೆ ಅಧಿಕಾರಿಗಳು ಮತ್ತು ನೌಕರರು ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಹೆದರುತ್ತಿದ್ದಾರೆ. ಹೀಗಾಗಿ ಆಡಳಿತ ವ್ಯವಸ್ಥೆಯು ಹದಗೆಡುವ ವಾತಾವರಣ ನಿರ್ಮಾಣವಾಗಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಧಿಕಾರಿಗೆ ಮಾನಸಿಕ ಹಿಂಸೆ ನೀಡಿದ ಕುಮಾರ್ ಎಂಬತನನ್ನು ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.‌

ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರಿಗೆ ಮನವಿ ಸಲ್ಲಿಸಿದರು.  ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸಿಂಧುವಳ್ಳಿ ಕೆಂಪಣ್ಣ, ಪ್ರಧಾನ ಕಾರ್ಯದರ್ಶಿ ಶಿವಪ್ಪ ದೇವರು, ದುಗ್ಗಹಳ್ಳಿ ಶಿವ ನಾಗಪ್ಪ, ಮಂಜುನಾಥ್, ನಂದಿನಿ ಮಹೇಶ್, ನಗರಸಭಾ ಸದಸ್ಯರಾದ ಮಹದೇವ ಪ್ರಸಾದ್, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.