ನಂಜನಗೂಡು: ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದ ಕಾರ್ಮಿಕನಿಗೆ ನ್ಯಾಯ ಕೋರಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಮಿಕ ಪ್ರಸಾದ್ ಮೇಲೆ ಆಡಳಿತ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಕಪಸೋಗೆ ಗ್ರಾಮದ ಕುಮಾರಸ್ವಾಮಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದ. ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾರ್ಮಿಕ ಮುಖಂಡ ಪ್ರಸಾದ್ ಜಿಎಂ ಮುಂದಾಳತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸಿದ ಮಾರನೇ ದಿನ ಕಾರ್ಖಾನೆಗೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ದಲಿತ ಕಾರ್ಮಿಕ ಪ್ರಸಾದ್ ಮೇಲೆ ಹಲ್ಲೆ ನಡೆಸಲಾಗಿದೆ.

ಅಲ್ಲದೆ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಇದೇ ರೀತಿಯ ಎರಡು ಮೂರು ಪ್ರಕರಣಗಳು ಕಾರ್ಖಾನೆಯಲ್ಲಿ ನಡೆದಿವೆ ಎನ್ನಲಾಗಿದೆ. ಕಳೆದ ಮಾರ್ಚ್ ನಲ್ಲಿ ಆಡಳಿತ ಅಧಿಕಾರಿಗಳ ಮೇಲೆ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ಪ್ರಕರಣ ದಾಖಲಾಗಿದ್ದರು, ಪದೇಪದೇ ದಲಿತ ಕಾರ್ಮಿಕರಿಗೆ ದೌರ್ಜನ್ಯ ನಡೆಸಲಾಗುತ್ತಿದೆ. ನಾವು ದಲಿತ ಸಮುದಾಯದಲ್ಲಿ ಹುಟ್ಟಿರೋದೇ ತಪ್ಪೇ ಎಂದು ಅಳಲು ತೋಡಿಕೊಂಡಿದ್ದಾರೆ.
ಹೋರಾಟ ಹತ್ತಿಕ್ಕಲು ಹಲ್ಲೆ ಆರೋಪ:
ಹಿಂದೆ ಕಾರ್ಖಾನೆಯ ಆಡಳಿತ ಸಿಬ್ಬಂದಿಗಳ ವಿರುದ್ಧ ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಇದನ್ನೇ ಗುರಿಯಾಗಿಟ್ಟುಕೊಂಡು ಪ್ರಸಾದ್ ಅವರ ಹೋರಾಟವನ್ನು ಹತ್ತಿಕ್ಕಲು ಆಡಳಿತ ಸಿಬ್ಬಂದಿ ಯೋಜಿತವಾಗಿ ಹಲ್ಲೆ ನಡೆಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.
ಸದ್ಯ ನಂಜನಗೂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ಪ್ರಸಾದ್ ಮಾತನಾಡಿ, “ನನಗೆ ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್‌ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು. ನನಗೆ ಏನೇ ಆದರೂ ಅವರೇ ನೇರ ಹೊಣೆ. ಎಂದು ಕೆಲ ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ. ಕಾರ್ಖಾನೆಯಲ್ಲಿ ಜಾತಿ ವ್ಯವಸ್ಥೆ ತಾಂಡವವಾಡುತ್ತಿದೆ. ದಲಿತ ಎಂಬ ಕಾರಣಕ್ಕೆ ನಿರಂತರ ಕಿರುಕುಳ ನೀಡುತ್ತಿದ್ದಾರೆ.
ಹೋರಾಟ ಮಾಡಬಾರದೆಂದು ಧಮ್ಕಿ ಹಾಕಿದ್ದರು ಎಂದರು.
ಘಟನೆ ಕುರಿತು ಪ್ರತಿಕ್ರಿಯಿಸಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಉಪ ವಿಭಾಗೀಯ ಸಂಚಾಲಕ ಮಂಜು ಶಂಕರಪುರ, “ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಪ್ರಸಾದ್ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಕಾರ್ಖಾನೆ ಮುಂಭಾಗದಲ್ಲಿ ಉಗ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೂಡಿಆರ್ ಪ್ರಕರಣ ದಾಖಲಾಗಿದೆ.

