ನಂಜನಗೂಡು: ನಗರದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಹೊಸಹಳ್ಳಿ ಗೇಟ್ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಆರು ಬಾಲಕರನ್ನು ವಶಕ್ಕೆ ಪಡೆದಿದ್ದಾರೆ.

ದಾಖಲೆಗಳ ಪರಿಶೀಲನೆ ಬಳಿಕ ಇಬ್ಬರು 18 ವರ್ಷ ಮೇಲ್ಪಟ್ಟವರು ಎಂದು ತಿಳಿದುಬಂದಿದ್ದು, 14ರಿಂದ 18 ವರ್ಷದೊಳಗಿನ ನಾಲ್ವರು ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ. ಜಾರ್ಖಂಡ್ ಮೂಲದವರಾದ ಇವರನ್ನು ಮೈಸೂರಿನ ಬಾಲಕರ ಬಾಲಮಂದಿರದಲ್ಲಿ ಇರಿಸಲಾಗಿದೆ.

ಕಿಶೋರ ಕಾರ್ಮಿಕರನ್ನು ಕಾಮಗಾರಿಯಲ್ಲಿ ದುಡಿಸಿಕೊಳ್ಳುತ್ತಿದ್ದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಇಲಾಖೆ ನಿರೀಕ್ಷಕಿ ಅಂಬಿಕಾ ತಿಳಿಸಿದ್ದಾರೆ. ಅಧಿಕಾರಿಗಳ ವಿಶೇಷ ತಂಡ ರಚಿಸಿ ನಾಲ್ವರು ಕಿಶೋರರನ್ನು ರಕ್ಷಿಸಲಾಗಿದೆ. ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾರ್ಯಾಚರಣೆಯಲ್ಲಿ ಯೋಜನಾಧಿಕಾರಿ ಮಲ್ಲಿಕಾರ್ಜುನ್, ಕಾರ್ಮಿಕ ಇಲಾಖೆ ನಿರೀಕ್ಷಕಿ ಅಂಬಿಕಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭವ್ಯಶ್ರೀ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.