ನಂಜನಗೂಡು: ಡಾ. ಹೆಚ್.ಸಿ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಡಾ.ಹೆಚ್.ಸಿ ಮಹದೇವಪ್ಪ ರವರ ಅಭಿಮಾನಿಗಳ ಬಳಗ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತಿಲ್ಲ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಇಂದಿರಾ ಗಾಂಧಿ ಕಾಲದಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಆದರೆ ದಲಿತರಿಗೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತಿಲ್ಲ. ಮಹದೇವಪ್ಪ ರವರು ಸರ್ಕಾರದಲ್ಲಿ ಸಾಕಷ್ಟು ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿ, ದೇಶದಲ್ಲಿ ಮಾದರಿ ಸಚಿವರಾಗಿದ್ದಾರೆ.
ಅಲ್ಲದೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯರವರಿಗೆ ಜೊತೆಯಾಗಿ ನಿಂತವರು ಡಾ.ಹೆಚ್. ಸಿ ಮಹದೇವಪ್ಪ ರವರು, ಎಲ್ಲ ಸಮುದಾಯವನ್ನು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ 6 ಸ್ಥಾನಗಳು ಬರುವುದು ಕಷ್ಟವಾಗುತ್ತದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಡಾ.ಹೆಚ್.ಸಿ ಮಹದೇವಪ್ಪ ರವರ ಅಭಿಮಾನಿಗಳು, ಸುನೀಲ್ ಬೋಸ್ ಅಭಿಮಾನಿಗಳ ಬಳಗ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು.

