Ad

ಚನ್ನಪಟ್ಟಣದ ಅಭ್ಯರ್ಥಿ ಬಗ್ಗೆ ವರಿಷ್ಠರ ನಿರ್ಧಾರ : ನಿಖಿಲ್

ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ

ಮೈಸೂರು:   ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದರು.

Ad
300x250 2

ಪಕ್ಷದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಎರಡೂ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.

ಮತ್ತೆ ಮೋದಿಯವರು ಪ್ರಧಾನಿ ಆಗಲು ಜನ ತೀರ್ಪು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ದೇವೇಗೌಡರು ಮೋದಿ ಅವರ ನಾಯಕತ್ವ ಮೆಚ್ಚಿ ಮೈತ್ರಿ ಭಾಗವಾಗಲು ತೀರ್ಮಾನ ಮಾಡಿದರು. ಚಾಮರಾಜನಗರ, ಹಾಸನ ಹೊರತುಪಡಿಸಿ ಹಳೇ ಮೈಸೂರು ಭಾಗದಲ್ಲಿ ಎಲ್ಲಾ ಕಡೆ ಮೈತ್ರಿ ಯಶಸ್ವಿಯಾಗಿದೆ. ಜನತೆಯ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದು ನಿಖಿಲ್ ಅವರು ತಿಳಿಸಿದರು.

ಗ್ಯಾರಂಟಿ ನಿಲ್ಲಿಸುತ್ತೇವೆ ಎನ್ನುವುದು ಉದ್ದಟತನ:
ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರೇ ಮಾತನಾಡುತ್ತಿದ್ದಾರೆ. ಇಂತಹ ಉದ್ಧಟತನದ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಹಾಗೂ ದೇಶದಲ್ಲಿ ನಮ್ಮ ಹೋರಾಟ ಇರಲಿದೆ ಎಂದು ಹೇಳಿದರು.

ಗೆಲುವು ಸೋಲು ಸಹಜ:
ಹಾಸನದ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು, ಈ ಸೋಲನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆಯಲ್ಲಿ ಗೆಲುವು ಸೋಲು ಸಹಜ. ಸೋತ ಮಾತ್ರಕ್ಕೆ ನಾವು ಕೈ ಕಟ್ಟಿ ಮನೆಯಲ್ಲಿ ಕೂರುವುದಿಲ್ಲ. ಹಾಸನದಲ್ಲಿ ಪಕ್ಷವನ್ನು ನಂಬಿಕೊಂಡ ಹಲವಾರು ಕಾರ್ಯಕರ್ತರು ಇದ್ದಾರೆ. ಹಾಸನ ಜಿಲ್ಲೆಯಲ್ಲಿ ಮುಂದೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ಕಾರ್ಯಕರ್ತರಿಗೆ ಧೈರ್ಯ ತುಂಬಿ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಅವರು ಹೇಳಿದರು.

ಪಕ್ಷದ ಸಂಘಟನೆಗೆ ದುಡಿಯುತ್ತೇನೆ:
ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವೆ. 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾದೆ. ರಾಜಕಾರಣ ದೊಡ್ಡ ಜವಾಬ್ದಾರಿ. ಪ್ರಾದೇಶಿಕ ಪಕ್ಷ ನಿಭಾಯಿಸುವ ಜವಾಬ್ದಾರಿ ಕೂಡ ದೊಡ್ಡದು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಿನಿಮಾಗಳಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನಮ್ಮ ನಡೆ ಉತ್ತಮವಾಗಿರಬೇಕು

ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಅವರು; ನಮ್ಮ ನಡೆ ಉತ್ತಮವಾಗಿ ಇರಬೇಕು. ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ಜನ ನಮ್ಮನ್ನು ಗಮನಿಸುತ್ತಿರುತ್ತಾರೆ. ನಮ್ಮ ನಡೆ ಉತ್ತಮವಾಗಿ ಇರುವಂತೆ ನೋಡಿಕೊಳ್ಳಬೇಕು. ಅವರ ಪ್ರಕರಣ ಈಗಾಗಲೇ ತನಿಖೆ ನಡೆಯುತ್ತಿದೆ. ಈಗಲೇ ಆ ವಿಚಾರದ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಎಂದರು.
ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad