ನಂಜನಗೂಡು: ತಾಲ್ಲೂಕಿನ ದೊಡ್ಡ ಕವಲಂದೆ ಹೋಬಳಿಯ ಕಾರ್ಯ ಗ್ರಾಮದಲ್ಲಿ ನವೆಂಬರ್ 11ರಿಂದ ಮೂರು ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ನಂಜನಗೂಡು ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಡಾ. ಸ್ಮಿತಾ ರಾಮು ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಮಾರನೇ ದಿನ ಆರಂಭವಾಗುವ ಜಾತ್ರಾ ಮಹೋತ್ಸವವು ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಲಿದೆ. ನ.11 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಶ್ರೀ ಸಿದ್ದೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಬಳಿಕ ಬೆಟ್ಟಕ್ಕೆ ಖುರ್ಜು ರಥೋತ್ಸವ ಜರುಗಲಿದೆ.

ನ.12ರ ಗುರುವಾರ ಪಲ್ಲಕ್ಕಿ ಉತ್ಸವದೊಂದಿಗೆ ಪಂಚದೇವರುಗಳ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಯಲಿದೆ. ನ.13ರ ಶುಕ್ರವಾರ ರಾತ್ರಿ 8 ಗಂಟೆಗೆ ಗ್ರಾಮದ ದರೋಬರೋ ಕೆರೆಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ತೆಪ್ಪೋತ್ಸವ ಜರುಗಲಿದೆ.

ಇದರೊಂದಿಗೆ ನ.18ರ ಬುಧವಾರ ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟದಲ್ಲಿ ಚಿಕ್ಕ ಜಾತ್ರಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ ಕಲ್ಪಿಸಿ, ಜಾತ್ರೆಯುದ್ದಕ್ಕೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸೂಚಿಸಲಾಗಿದೆ. ಜಾತ್ರೆಗೆ ಆಗಮಿಸುವ ಭಕ್ತರಿಗೆ ದೇವರ ದರ್ಶನಕ್ಕೆ ಸೂಕ್ತ ವ್ಯವಸ್ಥೆ, ಲಾಡು ಪ್ರಸಾದ ವಿತರಣೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ.

ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಆಂಬುಲೆನ್ಸ್ ಹಾಗೂ ತುರ್ತು ವಾಹನಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಜಾತ್ರೆಯ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ನಡೆಯುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೂ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಕ್ರಮ ವಹಿಸಲಾಗಿದೆ ಎಂದು ತಹಶೀಲ್ದಾರ್ ಡಾ. ಸ್ಮಿತಾ ರಾಮು ತಿಳಿಸಿದ್ದಾರೆ.