ಟಿ. ನರಸೀಪುರ: ತಡರಾತ್ರಿ ಟಿ. ನರಸೀಪುರ ಪಟ್ಟಣದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ‘ಸೀನು ಫ್ಯಾಷನ್’ ಎಂಬ ಬಟ್ಟೆ ಅಂಗಡಿಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಘಟನೆಯಿಂದಾಗಿ ಅಂದಾಜು ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಬಟ್ಟೆಗಳು ಮತ್ತು ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.
ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಕ್ಷಣಾರ್ಧದಲ್ಲಿ ಆಹುತಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಅವರ ಪ್ರಯತ್ನದ ಹೊರತಾಗಿಯೂ, ಬೆಂಕಿ ಅನಾಹುತದಿಂದ ಅಂಗಡಿಗೆ ಅಪಾರ ನಷ್ಟ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

