ನಂಜನಗೂಡು: ವಿಕಸಿತ ಭಾರತ ಗ್ಯಾರೆಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ಪ್ರತಿ ಕುಟುಂಬಕ್ಕೆ 125 ದಿನಗಳ ಉದ್ಯೋಗಾವಕಾಶ ಕಲ್ಪಿಸಿದ್ದು, ಗ್ರಾಮೀಣ ಭಾಗದ ಪ್ರತಿಯೊಬ್ಬ ಕೂಲಿ ಕಾರ್ಮಿಕರು ಇದರ ಸೌಲಭ್ಯ ಪಡೆದುಕೊಳ್ಳುವಂತೆ ನಂಜನಗೂಡು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಅವರು ತಿಳಿಸಿದ್ದಾರೆ.
ನಂಜನಗೂಡು ತಾಪಂ ಕಛೇರಿಯಲ್ಲಿ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯು ಜು.1-2026 ರಿಂದ ಅಧಿಕೃತವಾಗಿ ಜಾರಿಗೆ ಬಂದಿದ್ದು, ಗ್ರಾಮೀಣ ಜನತೆಯ ಆರ್ಥಿಕ ಸಬಲೀಕರಣಕ್ಕೆ ಈ ಯೋಜನೆ ಮತ್ತಷ್ಟು ಬಲ ತುಂಬಲಿದೆ.
ಗ್ರಾಮೀಣ ಭಾಗದ ಅಕುಶಲ ಹಾಗೂ ಕುಶಲ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗುವಂತೆ ಆರ್ಥಿಕ ವರ್ಷದಲ್ಲಿ ಈ ಹಿಂದೆ ಇದ್ದ 100 ದಿನವನ್ನು 125 ದಿನಗಳಿಗೆ ಹೆಚ್ಚಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯವು ಕೂಲಿ ಮೊತ್ತವನ್ನು 370 ರೂ. ನಿಂದ 382 ರೂ.ಗೆ ಏರಿಕೆ ಮಾಡಿದೆ.
ಅಷ್ಟೇ ಅಲ್ಲದೆ, ರೈತರಿಗೆ ಅನುಕೂಲವಾಗುವಂತೆ ಕೃಷಿ ಚಟುವಟಿಕೆಗಳ ಸಂದರ್ಭದಲ್ಲಿ 60 ದಿನಗಳ ಬಿಡುವು ನೀಡಿದ್ದು, ಆ ಸಮಯದಲ್ಲಿ ತಮ್ಮ ವೈಯಕ್ತಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳ ಬಹುದಾಗಿದ್ದು, ಗ್ರಾಮೀಣ ಭಾಗದ ಜನರು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

