ಮೈಸೂರು: ಬೀಗರ ಔತಣ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಚಾಮನಹಳ್ಳಿ ಹುಂಡಿ ಬಳಿ ನಡೆದಿದೆ.

ಹೆಚ್.ಡಿ.ಕೋಟೆ ಪಟ್ಟಣದ ಸೋಮಣ್ಣ ಕುಟುಂಬದ ಬೀಗರ ಔತಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಟೆಂಪೋದಲ್ಲಿ ಗದ್ದಿಗೆ ಮಾರ್ಗವಾಗಿ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಾಮನಹಳ್ಳಿ ಹುಂಡಿ ಬಳಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿದ್ದು, ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಸಂದರ್ಭದಲ್ಲಿ ಟೆಂಪೋ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಸಿದ್ದಪ್ಪಾಜಿ ಬೀದಿ ನಿವಾಸಿಗಳಾದ ಅಂಜಲಿ (18), ಪುನೀತ್ (25), ಬಸವರಾಜು (30), ಮಲ್ಲಿಕಾ (35), ಧನು (30), ದೇವಣ್ಣ (40) ಸೇರಿದಂತೆ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಸುದ್ದಿ ತಿಳಿದು ಆಸ್ಪತ್ರೆ ಆವರಣಕ್ಕೆ ಆಗಮಿಸಿದ ಗಾಯಾಳುಗಳ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಘಟನೆ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.