ನಂಜನಗೂಡು: ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ನಡೆಯಿತು. ಒಟ್ಟು 183.78 ಕೋಟಿ ವೆಚ್ಚದ 161 ಅಭಿವೃದ್ಧಿ ಕಾಮಗಾರಿಗಳಿಗೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವರುಣಾ ಕ್ಷೇತ್ರದ ಜನರು ತಮ್ಮ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಮತ್ತು ಅಭಿಮಾನಕ್ಕೆ ಭಾವನಾತ್ಮಕವಾಗಿ ಕೃತಜ್ಞತೆ ಸಲ್ಲಿಸಿದರು.

ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದಲೇ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ, 2008 ಮತ್ತು 2018ರಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದೇನೆ. ಇದಕ್ಕೆಲ್ಲ ವರುಣಾ ಕ್ಷೇತ್ರದ ಜನರ ಆಶೀರ್ವಾದವೇ ಕಾರಣ. ನನ್ನ ಯಶಸ್ಸಿನ ಶ್ರೇಯಸ್ಸು ನಿಮಗೆ ಸೇರಬೇಕು. ನಿಮ್ಮನ್ನು ಯಾವತ್ತೂ ಮರೆಯುವುದಿಲ್ಲ.

ನನಗೆ ಅಧಿಕಾರ ಇರಲಿ, ಇಲ್ಲದಿರಲಿ ನಿಮ್ಮ ಸೇವೆಯನ್ನು ಸದಾ ಮಾಡುತ್ತೇನೆ. 40 ವರ್ಷಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿದ್ದೇನೆ. ಇಷ್ಟು ವರ್ಷ ರಾಜಕೀಯದಲ್ಲಿ ಇರಲು ನಿಮ್ಮ ಆಶೀರ್ವಾದವೇ ಕಾರಣ. ಎಂಟು ಬಾರಿ ನನ್ನನ್ನು ಗೆಲ್ಲಿಸಿದ್ದೀರಿ. ನಿಮ್ಮ ಪ್ರೀತಿ, ಅಭಿಮಾನ ಮತ್ತು ಆಶೀರ್ವಾದವೇ ನನ್ನ ಶಕ್ತಿ ಎಂದು ಅವರು ಭಾವುಕರಾಗಿ ನುಡಿದರು.

ವರುಣಾ ಕ್ಷೇತ್ರದಲ್ಲಿ ಕಳೆದ ನಾಲ್ಕು ಅವಧಿಯಲ್ಲಿ ಐದು ಸಾವಿರ ಕೋಟಿಗೂ ಹೆಚ್ಚು ರೂಪಾಯಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ನನ್ನ ಕೆಲಸದ ಬಗ್ಗೆ ನನಗೆ ತೃಪ್ತಿಯಿದೆ. ಬಡವರ ಪರವಾಗಿ ಕೆಲಸ ಮಾಡುವ ಪ್ರಯತ್ನ ಮಾಡಿದ್ದೇನೆ.

2008ರಲ್ಲಿ ವರುಣಾ ಕ್ಷೇತ್ರ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ನಾಲ್ಕು ಚುನಾವಣೆಗಳಲ್ಲಿ ಮೂರು ಬಾರಿ ತಮ್ಮನ್ನು ಹಾಗೂ ಒಂದು ಬಾರಿ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿರುವ ಕ್ಷೇತ್ರದ ಜನರಿಗೆ ಧನ್ಯವಾದ ಅರ್ಪಿಸಿದರು.

ತಾವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಪಕ್ಷ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಅನ್ನಭಾಗ್ಯ ಸೇರಿದಂತೆ 20ರಿಂದ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ಎರಡನೇ ಬಾರಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಡವರು ಹಸಿವಿನಿಂದ ಬಳಲಬಾರದು, ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆಯಾಗಬೇಕು ಎಂಬ ಉದ್ದೇಶದಿಂದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಜಲಾಶಯಗಳು ಸಂಪೂರ್ಣವಾಗಿ ತುಂಬಿಲ್ಲ. ಇಂತಹ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾಗಿವೆ. ಗ್ಯಾರಂಟಿ ಯೋಜನೆಗಳು ಜಾರಿಯಾಗದೇ ಹೋಗಿದ್ದರೆ ಜನರ ಸಂಕಷ್ಟ ಇನ್ನಷ್ಟು ಹೆಚ್ಚಾಗುತ್ತಿತ್ತು.

ನಾನು ಗೆಲ್ಲದೇ ಹೋಗಿದ್ದರೆ, ಮುಖ್ಯಮಂತ್ರಿಯಾಗದೇ ಹೋಗಿದ್ದರೆ ಈ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತಿರಲಿಲ್ಲ. ಈ ಎಲ್ಲ ಕಾರ್ಯಕ್ರಮಗಳ ಹಿಂದೆ ವರುಣಾ ಕ್ಷೇತ್ರದ ಜನರಿದ್ದಾರೆ. ನೀವು ನನಗೆ ಶಕ್ತಿ ಕೊಟ್ಟಿದ್ದೀರಿ. ನುಡಿದಂತೆ ನಡೆದ ಪಕ್ಷವಿದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಹೇಳಿದರು.

ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದು, ಹಿಂದಿನ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸವಿದೆ. ಇನ್ನೂ ಒಂದೂವರೆ ವರ್ಷ ನಾನು ಶಾಸಕನಾಗಿರುತ್ತೇನೆ. ಈ ಅವಧಿಯಲ್ಲೂ ನಿಮ್ಮ ಕೆಲಸ ಮಾಡಿಕೊಡುತ್ತೇನೆ. ನಿಮ್ಮ ಪ್ರೀತಿ, ಅಭಿಮಾನ ಹಾಗೂ ಆಶೀರ್ವಾದ ನನ್ನ ಮೇಲಿರಲಿ. ಯತೀಂದ್ರ ಸಿದ್ದರಾಮಯ್ಯ ಅವರ ಮೇಲೂ ನಿಮ್ಮ ಪ್ರೀತಿ, ಅಭಿಮಾನ ಮತ್ತು ಮಾರ್ಗದರ್ಶನ ಇರಲಿ ಎಂದು ಮನವಿ ಮಾಡಿದರು. ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದ ವೇಳೆ ಸಭಿಕರು “ಮುಂದೆ ನೀವೇ ಮುಖ್ಯಮಂತ್ರಿ ಆಗಬೇಕು” ಎಂದು ಘೋಷಣೆ ಕೂಗಿದರು.

ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ವರುಣಾ ಕ್ಷೇತ್ರದಲ್ಲಿ 146 ಕೋಟಿಗೂ ಹೆಚ್ಚು ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸರ್ಕಾರದ ಬಳಿ ಹಣವಿಲ್ಲ ಎಂದು ಕೆಲವರು ಹೇಳುತ್ತಾರೆ. ಹಣವಿಲ್ಲದೆ ಇಷ್ಟೊಂದು ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವೇ? ನಾವು ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳನ್ನು ಜನರಿಗೆ ನೀಡಿದ್ದೇವೆ. ಸರ್ಕಾರದ ಹಣ ಎಂದರೆ ಜನರ ಹಣ. ಅದನ್ನು ಯೋಜನೆಗಳ ಮೂಲಕ ಜನರಿಗೆ ತಲುಪಿಸುತ್ತಿದ್ದೇವೆ.

ಜನಸಾಮಾನ್ಯರ ಬದುಕಿಗೆ ನೆರವಾಗುವ ಪಂಚ ಗ್ಯಾರಂಟಿಗಳು, ಸಾರ್ವಜನಿಕ ಸೇವೆಗಳನ್ನು ಸುಲಭಗೊಳಿಸುವ ‘ಸೇವಾ ಒನ್’ ಪೋರ್ಟಲ್, ವಿದ್ಯಾರ್ಥಿಗಳ ಉಚಿತ ಬಸ್ ಪಾಸ್, ಯುವಜನರಿಗಾಗಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಸಂಘ’, ರೈತರಿಗಾಗಿ ‘ನೇಗಿಲ ಯೋಗಿ’ ಹಾಗೂ ‘ರೈತ ಚೈತನ್ಯ’ ಕಾರ್ಯಕ್ರಮಗಳು ಜನಪರ ಆಡಳಿತದ ಬದ್ಧತೆಯನ್ನು ಪ್ರತಿಬಿಂಬಿಸುತ್ತಿವೆ ಎಂದು ತಿಳಿಸಿದರು.

‘ನೇಗಿಲ ಯೋಗಿ’ ಯೋಜನೆಯಡಿ ರೈತರಿಗೆ ವರ್ಷಕ್ಕೆ ಮೂರು ಬಾರಿ ಉಚಿತ ಉಳುಮೆ ಸೌಲಭ್ಯ ಕಲ್ಪಿಸುವುದು ಸೇರಿದಂತೆ ರೈತರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವಜನರ ಕಲ್ಯಾಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.

ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ನಮ್ಮ ತಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು. ನಾನು ಕೂಡ ನಿಮ್ಮಿಂದ ಶಾಸಕನಾಗಿ, ಇಂದು ಸಚಿವನಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಇದಕ್ಕೆಲ್ಲ ವರುಣಾ ಕ್ಷೇತ್ರದ ಜನರ ಆಶೀರ್ವಾದವೇ ಕಾರಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಶಿವಕುಮಾರ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ತಹಶೀಲ್ದಾರ್ ಡಾ.ಸ್ಮಿತಾ ರಾಮು, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಇಂಧನ್ ಬಾಬು, ಕಾಂಗ್ರೆಸ್ ಮುಖಂಡರಾದ ದಾಸನೂರು ನಾಗೇಶ್, ಮಾಜಿ ಗ್ರಾ.ಪಂ ಸದಸ್ಯ ಲೋಕೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.