ನಂಜನಗೂಡು: ಕೇರಳದ ವೈನಾಡಿನಲ್ಲಿ ಹೆಚ್ಚಾದ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ಇದರಿಂದಾಗಿ ನಂಜನಗೂಡಿನ ಮೂಲಕ ಹರಿಯುವ ಕಪಿಲಾ ನದಿ ಮೈದುಂಬಿ ಹರಿಯುತ್ತಿದೆ.

ಕಬಿನಿ ಜಲಾಶಯಕ್ಕೆ ಪ್ರಸ್ತುತ 31,746 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. ಜಲಾಶಯದ ನೀರಿನ ಮಟ್ಟ ನಿಯಂತ್ರಿಸಲು 27,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ನಂಜನಗೂಡು ತಾಲ್ಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರು ಮತ್ತು ಭಕ್ತರಿಗೆ ಕಪಿಲಾ ನದಿಗೆ ತೆರಳದಂತೆ ನಿರ್ಬಂಧ ವಿಧಿಸಿದೆ.

ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರು ಸ್ನಾನಕ್ಕೆ ತೆರಳದಂತೆ ದೇವಾಲಯ ಆಡಳಿತ ಮನವಿ ಮಾಡಿದೆ. ನಂಜನಗೂಡು ತಹಶೀಲ್ದಾರ್ ಡಾ. ಸ್ಮಿತಾ ರಾಮು, ನಗರಸಭಾ ಆಯುಕ್ತ ಬಸವರಾಜು, ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು. ಮಕ್ಕಳನ್ನು ನದಿ ಬಳಿ ಬಿಡಬಾರದು. ನದಿ ದಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಕಪಿಲಾ ನದಿಗೆ ತೆರಳದಂತೆ ಮನವಿ ಎಂದು ಹೇಳಿದರು.

ವೈನಾಡಿನಲ್ಲಿ ಮಳೆ ಮುಂದುವರೆಯುತ್ತಿರುವ ಕಾರಣ ಮುಂದಿನ 24 ಗಂಟೆಗಳ ಕಾಲ ನೀರಿನ ಮಟ್ಟ ಮತ್ತಷ್ಟು ಏರುವ ಸಾಧ್ಯತೆಯಿದೆ. ತಗ್ಗು ಪ್ರದೇಶದ ಜನರು ಅಗತ್ಯ ಸಾಮಗ್ರಿಗಳೊಂದಿಗೆ ಸಿದ್ಧರಾಗಿರಬೇಕು ಎಂದು ತಾಲ್ಲೂಕು ಆಡಳಿತ ಸೂಚಿಸಿದೆ.