ಮೈಸೂರು: ದೇಶದ ರಕ್ಷಣೆಗಾಗಿ ಹೋರಾಡಿ ಮಡಿದ ವೀರ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಯುದ್ದ ಸ್ಮಾರಕ ನಿರ್ಮಾಣ ಮಾಡಬೇಕೆಂಬ ನಿವೃತ್ತ ಯೋಧರ ಮಹದಾಸೆಯಂತೆ ಕಳೆದ ಎರಡೂವರೆ ವರ್ಷಗಳ ಹಿಂದೆ ಆರಂಭವಾದ ಕಾಮಗಾರಿ ನೆನೆಗುದಿಗೆ ಬಿದ್ದಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಉದ್ಯಾನವನದಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಆರಂಭವಾದ ಯುದ್ದ ಸ್ಮಾರಕ ನಿರ್ಮಾಣ ಕಾಮಗಾರಿ ನೆನೆಗುದಿಗೆ ಬಿದ್ದಿದೆ. 1.47 ಕೋಟಿ ರೂಪಾಯಿ ವೆಚ್ಚದೊಂದಿಗೆ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಗೊಂಡಿದೆಯಾದರು ಎರಡೂವರೆ ವರ್ಷ ಕಳೆದರೂ ಮುಗಿಯದಿರುವುದು ವಿಪರ್ಯಾಸವೆನಿಸಿದೆ.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ 2023ರ ಜುಲೈ 26ರಂದು ಕಾರ್ಗಿಲ್ ಯುದ್ಧ ವಿಜಯ ದಿವಸದ ದಿನವೇ ಯುದ್ದ ಸ್ಮಾರಕ ಲೋಕಾರ್ಪಣೆ ಆಗಬೇಕಿತ್ತು. ಆದರೆ ಕಾಮಗಾರಿ ಕುಂಟುತ್ತಾ ಸಾಗಿರುವುದರಿಂದ ಯುದ್ದಸ್ಮಾರಕ ಕಾಮಗಾರಿ ಈಗಲೂ ಪೂರ್ಣಗೊಂಡಿಲ್ಲ.
ಈ ಬಾರಿಯ ಗಣರಾಜ್ಯೋತ್ವದ ದಿನದಂದು ಜನವರಿ 26ರ ಒಳಗಾದರೂ ಯುದ್ದ ಸ್ಮಾರಕ ಕಾಮಗಾರಿ ಮುಗಿದು ಉದ್ಘಾಟನೆ ಆಗಲಿದೆ ಎಂಬ ನಿರೀಕ್ಷೆಯೂ ಹುಸಿಯಾಗಿದೆ. ಸದ್ಯಕ್ಕೆ ಕಾಮಗಾರಿ ಸ್ಥಗಿತ ಆಗಿರುವುದರಿಂದ ಯುದ್ದ ಸ್ಮಾರಕ ನಿರ್ಮಾಣ ಸ್ಥಳದಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆಯಲ್ಲದೇ, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.
ಇನ್ನು ಮುಂದಾದರೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ ಯುದ್ದ ಸ್ಮಾರಕ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಲೋಕಾರ್ಪಣೆ ಮಾಡಲಿ ಎಂಬುದು ಜನತೆಯ ಆಶಯವಾಗಿದೆ.