ನಂಜನಗೂಡು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಸುವಿನಹಳ್ಳಿ ಗ್ರಾಮದ ಗಜೇಂದ್ರ ಕುಮಾರ್ (35) ಮೃತ ದುರ್ದೈವಿ. ರಾತ್ರಿಯ ಸಮಯದಲ್ಲಿ ಅಪರಿಚಿತ ವಾಹನ ಚಾಲಕ ಕೂಗಲೂರು ಗ್ರಾಮದ ಸಿದ್ದಯ್ಯನಹುಂಡಿ ಗ್ರಾಮದ ಗೇಟ್ ಕಡೆಯಿಂದ ಕಸುವಿನಹಳ್ಳಿ ಗ್ರಾಮದ ಕಡೆಗೆ ಅತಿ ವೇಗವಾಗಿ ಬಂದು ಬೈಕ್ ನಲ್ಲಿ ಹೋಗುತ್ತಿದ್ದ ಗಜೇಂದ್ರ ಕುಮಾರ್ ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.