ನಂಜನಗೂಡು: ನಂಜನಗೂಡು ನಗರದ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ನೊಬ್ಬ ಮೃತಪಟ್ಟಿದ್ದು, ಕಾರ್ಖಾನೆ ಆಡಳಿತ ಮಂಡಳಿ ಸೂಕ್ತ ಪರಿಹಾರ ನೀಡದ ಹಿನ್ನೆಲೆಯಲ್ಲಿ ಕಾರ್ಖಾನೆ ಮುಂದೆ ಕುಟುಂಬಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.

ನಂಜನಗೂಡು ನಗರದ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿರುವ ನ್ಯೂ ಹೊರೈಝನ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ದೇವೀರಮ್ಮನಹಳ್ಳಿಹುಂಡಿ ಗ್ರಾಮದ ಶಿವಶಂಕರ್ (48) ವರ್ಷದ ವ್ಯಕ್ತಿ ಕಳೆದ 25 ವರ್ಷಗಳಿಂದ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಕಳೆದ ಶುಕ್ರವಾರ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ರಕ್ತ ವಾಂತಿ ಮಾಡಿಕೊಂಡು ತೀವ್ರ ಅಸ್ವಸ್ಥಗೊಂಡಿದ್ದರು. ಆ ಸಂದರ್ಭದಲ್ಲಿ ಯಾವುದೇ ತುರ್ತು ಚಿಕಿತ್ಸೆಯನ್ನು ಕಾರ್ಖಾನೆ ಆಡಳಿತ ಮಂಡಳಿ ನೀಡದೆ, ಸಂಬಂಧಿಕರು ಬಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇಂದು ಬುಧವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕಾರ್ಖಾನೆಗೆ ಬಂದು ಮೃತಪಟ್ಟ ವ್ಯಕ್ತಿಗೆ 20 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಒಬ್ಬರಿಗೆ ಕಾರ್ಖಾನೆಯಲ್ಲಿ ಕೆಲಸ ಕೊಡಬೇಕು ಎಂದು ಕೇಳಿದಾಗ, ಕಾರ್ಖಾನೆ ಆಡಳಿತ ಮಂಡಳಿ ಕುಟುಂಬಸ್ಥರಿಗೆ ಯಾವುದೇ ರೀತಿಯ ಪರಿಹಾರವನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಹಿನ್ನಲೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಮುಂದೆ ಜಮಾವನೆಗೊಂಡು ಸೂಕ್ತ ಪರಿಹಾರ ನೀಡುವವರೆಗೆ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಕಾರ್ಖಾನೆ ಗೇಟ್ ಮುಂಭಾಗ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.