ಉಡುಪಿ: ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಲ್ಲಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿ ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಇದರಿಂದಾಗಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದು ಜೀವ ಹಾನಿ ಕೂಡ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಇವತ್ತು ಇಂದ್ರಾಳಿ ಸೇತುವೆ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ನೂರಾರು ಜನರು ಭಾಗಿಯಾದರು. ಕೇಂದ್ರ ಸರ್ಕಾರದ ವಿರುದ್ಧ ಮತ್ತು ಸಂಸದ ಕೋಟ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಇಂದ್ರಾಳಿ ಸೇತುವೆ ಪಕ್ಕವೇ ಇರುವ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಶೀಘ್ರ ರೈಲ್ವೆ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.
ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಶಾಲೆಗೆ ಬರುವಾಗ ಮತ್ತು ಶಾಲೆ ಬಿಡುವಾಗ ನಮಗೆ ಸಾಕಷ್ಟು ತೊಂದರೆ ಆಗುತ್ತಿದೆ. ಬಹಳಷ್ಟು ವರ್ಷಗಳಿಂದ ಈ ಸೇತುವೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು ನೂರಾರು ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ನಮಗೆ ವಾಹನಗಳಿಂದ ಇಳಿದು ರಸ್ತೆ ದಾಟಿ ಶಾಲೆಗೆ ಬರಲು ಅನಾನುಕೂಲವಾಗುತ್ತಿದೆ. ಶೀಘ್ರ ಈ ಸಮಸ್ಯೆಗೆ ಮುಕ್ತಿ ಕಲ್ಪಿಸಬೇಕು ಎಂದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಒತ್ತಾಯಿಸಿದರು.