ಉಡುಪಿ: ತಾಲೂಕಿನ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ (ಅ. 28) ನಡೆದಿದೆ.

ಮೃತ ಬಾಲಕಿಯನ್ನು ಬಾಗಲಕೋಟೆ ಮೂಲದ ಮೇಘನಾ (13) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಸುಮಾರು 6 ಗಂಟೆಗೆ ಬಾಲಕಿ ದಿಢೀರನೆ ಮೂರ್ಛೆ ತಪ್ಪಿ ಕುಸಿದು ಬಿದ್ದಿದ್ದಾಳೆ ಎನ್ನಲಾಗಿದೆ. ತಕ್ಷಣ ಶಾಲಾ ಸಿಬ್ಬಂದಿ ಬಾಲಕಿಯನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.