ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2023-24ನೆ ಸಾಲಿನಲ್ಲಿ 15.23ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.
ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 18,309 ಸದಸ್ಯರಿಂದ 4.77ಕೋಟಿ ರೂ. ಪಾಲು ಬಂಡವಾಳ ಹಾಗೂ 509.55ಕೋಟಿ ರೂ. ಠೇವಣಿ ಹೊಂದಿದ್ದು, 402.12ಕೋಟಿ ರೂ. ಹೊರ ಬಾಕಿ ಸಾಲ ಹೊಂದಿದೆ. ಈ ಮೂಲಕ ಸಂಘವು 2023-24ನೇ ಸಾಲಿನಲ್ಲಿ ಸುಮಾರು 2500ಕೋಟಿ ರೂ.ಗೂ ಮೇಲ್ಪಟ್ಟು ವಾರ್ಷಿಕ ವಹಿವಾಟು ನಡೆಸಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಆಯ್ದ 24 ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಜಾರ್ಜ್ ಸ್ಯಾಮುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್.ಉಮಾನಾಥ, ಪುರುಷೋತ್ತಮ ಶೆಟ್ಟಿ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ.ನಾಯಕ್, ಸದಾಶಿವ ನಾಯ್ಕಿ, ಮನೋಹರ್ ಎಸ್.ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್.ಭಟ್ ಉಪಸ್ಥಿತರಿದ್ದರು.
ಸಂಘದ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.