ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಪ್ರಯುಕ್ತ “ಭೀಮೋತ್ಸವ-2025″ಹಾಗೂ ಭೀಮ ಸಾರಥಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ ಎ.14ರಂದು ಬೆಳಿಗ್ಗೆ 10.30ಕ್ಕೆ ಕುಂದಾಪುರದ ಶಾಸ್ತ್ರಿ ಸರ್ಕಲ್ ನ ಲಯನ್ಸ್ ಸ್ಕ್ವೇರ್ ನಲ್ಲಿ ನಡೆಯಲಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಶೋಕ್ ಕುಮಾರ್ ಶೆಟ್ಟಿ ಅವರಿಗೆ ಭೀಮ ಸಾರಥಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮ್ ಸುಂದರ್ ತೆಕ್ಕಟ್ಟೆ, ಸುರೇಶ್ ಹಕ್ಲಾಡಿ, ರಾಜೇಂದ್ರ ನಾಥ್ ಉಪಸ್ಥಿತರಿದ್ದರು.