ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪೊಲೀಸರ ಬಿಗಿ ಭದ್ರತೆಯ ನಡುವೆಯೇ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಕಾರರು ನುಗ್ಗಿದರು. ರಾಜ್ಯ ಸರಕಾರದ ವಿರುದ್ಧ ಮತ್ತು ಸಚಿವ ಜಮೀರ್ ಅಹ್ಮದ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನುಗ್ಗಿದ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ಕೆಲಹೊತ್ತು ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ತಳ್ಳಾಟ ನಡೆಯಿತು.
ಕೊನೆಗೂ ಪೊಲೀಸರು ಪ್ರತಿಭಟನಕಾರರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಬಳಿಕ ಮಾತನಾಡಿದ ಬಿಜೆಪಿ ಮುಖಂಡರು ಕಾಂಗ್ರೆಸ್ ಸರಕಾರ ರೈತರು ಮತ್ತು ಜನಸಾಮಾನ್ಯರ ಜಮೀನನ್ನು ಕಬಳಿಸುವುದರ ವಿರುದ್ದ ನಿರಂತರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.