ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಇಂದು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ದಿಕ್ಕಾರ ಕೂಗಿದರು. ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಕೊನೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಗೆ ಏಕಾಏಕಿ ನುಗ್ಗಿದರು. ಪೊಲೀಸರನ್ನು ತಳ್ಳಿಕೊಂಡು ಮುನ್ನುಗ್ಗಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕೆಲಕಾಲ ಹೆದ್ದಾರಿ ತಡೆದು ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದ ಆ್ಯಂಬುಲೆನ್ಸ್ ಗೆ ಪ್ರತಿಭಟನಾಕಾರರು, ತೆರಳಲು ಅನುವು ಮಾಡಿಕೊಟ್ಟರು. ಪೊಲೀಸರ ಮನವಿ ಮೇರೆಗೆ ರಸ್ತೆ ತಡೆಯನ್ನು ಹಿಂಪಡೆದುಕೊಂಡರು.