ಉಡುಪಿ: ತೀರ್ಥಹಳ್ಳಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ 169(ಎ)ರ ಕರಾವಳಿ ಜಂಕ್ಷನ್‌ನಿಂದ ಮಲ್ಪೆಯವರೆಗಿನ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆ ಅಭಿವೃದ್ಧಿ ಕಾಮಗಾರಿ ಹಲವು ತಿಂಗಳುಗಳಿಂದ ನಡೆಯುತ್ತಿದ್ದರೂ ಪೂರ್ಣಗೊಳ್ಳದೇ ಇರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಅರ್ಧಂಬರ್ಧವಾಗಿ ನಡೆಸಲಾಗಿರುವ ಕಾಮಗಾರಿಯಿಂದ ರಸ್ತೆಯ ಹಲವೆಡೆ ಹೊಂಡ-ಗುಂಡಿಗಳು ನಿರ್ಮಾಣಗೊಂಡಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ.

ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ರಸ್ತೆ ದಾಟಲು ಮತ್ತು ಸಂಚರಿಸಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಮಳೆಗಾಲದಲ್ಲಿ ಹೊಂಡಗಳಲ್ಲಿ ನೀರು ನಿಂತು ಅಪಾಯದ ಸಾಧ್ಯತೆ ಹೆಚ್ಚಿರುವುದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ರಸ್ತೆಯ ಅವ್ಯವಸ್ಥೆಯಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಬೇಕಾಗುತ್ತಿದ್ದು, ಸಂಚಾರ ದಟ್ಟಣೆ ಕೂಡ ಉಂಟಾಗುತ್ತಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

