ಉಡುಪಿ: ಶಿಕ್ಷಣ ಎಂದರೆ ಪರೀಕ್ಷೆಯಲ್ಲಿ ಅಂಕ ಗಳಿಸುವುದು ಮಾತ್ರವಲ್ಲ. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಜ್ಞಾನ ಸಂಪಾದಿಸಬೇಕು. ಮಕ್ಕಳು ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವುದರ ಜತೆಗೆ ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲೆಯ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶವನ್ನು ಮುನ್ನಡೆಸುವ ಶಕ್ತಿ ಯುವಜನರಲ್ಲಿದೆ. ವಿದ್ಯಾರ್ಥಿಗಳು ಪಠ್ಯಪುಸ್ತಕದ ಜ್ಞಾನದ ಜತೆಗೆ ವಿವಿಧ ಕ್ಷೇತ್ರಗಳ ಅರಿವು ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಂ.ಎಂ. ಆನಂದ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ಯೂನಿಯನ್ ನಿರ್ದೇಶಕರಾದ ಸುಧೀರ್ ವೈ., ಹರೀಶ್ ಕಿಣಿ ಅಲೆವೂರು, ಕ್ರಿಶ್ಚಿಯನ್ ಹೈಸ್ಕೂಲ್ ಪ್ರಾಂಶುಪಾಲೆ ಶ್ವೇತಾ, ನಿವೃತ್ತ ಉಪನ್ಯಾಸಕರಾದ ಯಾದವ ಟಿ. ಮತ್ತು ದಯಾನಂದ ಡಿ. ಉಪಸ್ಥಿತರಿದ್ದರು. ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.