ಉಡುಪಿ: ಹೆಬ್ರಿ ತಾಲೂಕಿನ ತಾಲೂಕು ಪಂಚಾಯತ್ ಅಧೀನದಲ್ಲಿರುವ ಹೆಬ್ರಿಯ ಎಂಆರ್‌ಎಫ್ (ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಕುಚ್ಚೂರು ಆಗ್ರಹಿಸಿದರು.
ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರ ಫೆಬ್ರುವರಿ 14ರಂದು ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಸಂಪೂರ್ಣ ಸುಟ್ಟುಹೋಗಿ ಭಾರೀ ನಷ್ಟ ಉಂಟಾಗಿದೆ. ಕಳೆದ ಏಳು ತಿಂಗಳಿಂದ ಘಟಕದಲ್ಲಿ ಕಸ ವಿಲೇವಾರಿಯಾಗದೇ ಸಂಗ್ರಹವಾಗಿದ್ದ ಹಿನ್ನೆಲೆಯಲ್ಲಿ ಯಾರೋ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರಬಹುದೆಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಇತ್ತೀಚೆಗೆ ಬೆಳ್ವೆ ಗ್ರಾಮ ಪಂಚಾಯತ್‌ನ ಕಸ ವಿಲೇವಾರಿ ಘಟಕಕ್ಕೂ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವುದನ್ನು ಉಲ್ಲೇಖಿಸಿದ ಅವರು, ಈ ಎರಡೂ ಘಟನೆಗಳ ಬಗ್ಗೆ ಅಧಿಕಾರಿಗಳು ಹಾಗೂ ಪಂಚಾಯತ್ ಇಲಾಖೆಯು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಬೆಂಕಿ ಹಚ್ಚಿರುವವರು ಯಾರು ಎಂಬುದನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ಘಟಕಕ್ಕೆ ಉಂಟಾದ ನಷ್ಟದ ಮೊತ್ತವನ್ನು ತಪ್ಪಿತಸ್ಥರಿಂದಲೇ ಭರಿಸುವಂತೆ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.

