ಉಡುಪಿ: ಜಿಲ್ಲೆಯಲ್ಲಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಡುಪಿ ಜಿಲ್ಲಾ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೀಪಾವಳಿ ಹಬ್ಬವನ್ನು ಪಟಾಕಿ ಸಿಡಿಸಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಇದರಿಂದ ವಾಯು ಮಾಲಿನ್ಯ, ಶಬ್ದಮಾಲಿನ್ಯ ಪರಿಸರ ಮಾಲಿನ್ಯ ಉಂಟಾಗುತ್ತದೆ. ದೇಶದ ಸರ್ವೋಚ್ಛ ನ್ಯಾಯಾಲಯವು ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಲು ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಸಿಎಸ್‌ಐಆರ್-ನೀರಿ ಇವರು ಶಿಫಾರಸ್ಸು ಮಾಡಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಅದು ಸೂಚಿಸಿದೆ.

ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ ಸಿಎಸ್‌ಐಆರ್- ನೀರಿ ಚಿಹ್ನೆ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಲಾಗುತ್ತದೆ. ಅಂತಹ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಸಾರ್ವಜನಿಕರು ಬಳಸಲು/ಉಪಯೋಗಿಸಲು ಅವಕಾಶವಿರುತ್ತದೆ.

ಆದ್ದರಿಂದ ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಲು ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಿ, ಸರ್ವೋಚ್ಛ ನ್ಯಾಯಾಲಯವು ನಿಗದಿ ಪಡಿಸಿರುವ ಸಮಯದಲ್ಲಿ ಮಾತ್ರ ಹಸಿರು ಪಟಾಕಿಗಳನ್ನು ಸಿಡಿಸುವಂತೆ ಕ. ರಾ.ಮಾ.ನಿ.ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರ ಸ್ನೇಹಿ ಸಿಡಿಮದ್ದುಗಳನ್ನು (ಗ್ರೀನ್ ಕ್ರಾಕರ್ಸ್) ಮಾತ್ರ ಸಿಡಿಸುವಂತೆ ಪ್ರಾಣಿ ದಯಾ ಸಂಘದ ಸದಸ್ಯ ಕಾರ್ಯದರ್ಶಿ ಹಾಗೂ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.