ಉಡುಪಿ: ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆ (ಐಐಜಿಜೆ)ಯ ಹೊಸ ಶ್ರೇಷ್ಠತಾ ಕೇಂದ್ರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರತ್ನ ಮತ್ತು ಆಭರಣ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು. “ಐಐಜಿಜೆ ಉಡುಪಿ ಸಂಸ್ಥೆ ದಕ್ಷಿಣ ಭಾರತದಲ್ಲಿ ಯುವಕರಿಗೆ ಉದ್ಯೋಗಾರ್ಹ ಕೌಶಲ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಇದು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ ಮತ್ತು ಜಾಗತಿಕ ಮಟ್ಟದ ಅವಕಾಶಗಳನ್ನು ಒದಗಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಭಾರತೀಯ ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿ (ಜಿಜೆಇಪಿಸಿ) ಅಧ್ಯಕ್ಷ ಕಿರಿತ್ ಬನ್ಸಾಲಿ, ಜಿಜೆಇಪಿಸಿ ಉಪಾಧ್ಯಕ್ಷ ಶೌನಕ್ ಪಾರಿಖ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಐಐಜಿಜೆ ಉಡುಪಿ ಕೇಂದ್ರವು ಆಭರಣ ವಿನ್ಯಾಸ, ಉತ್ಪಾದನೆ ಮತ್ತು ನವೀನ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮೂಲಕ ಉದ್ಯಮಕ್ಕೆ ಬೇಕಾದ ನುರಿತ ಮಾನವ ಸಂಪನ್ಮೂಲವನ್ನು ರೂಪಿಸುವುದಾಗಿದೆ.

