ಉಡುಪಿ: ಉಡುಪಿ ನಗರದ ಕಲ್ಸಂಕ ಜಂಕ್ಷನ್‌ನಲ್ಲಿ ವಾಹನ ದಟ್ಟಣೆಯಿಂದ ಟ್ರಾಫಿಕ್ ನಿಯಂತ್ರಣ ಮಾಡಲು ಅಳವಡಿಸಿದ್ದ ಬ್ಯಾರಿಕೇಡ್ ತೆರವು ಮಾಡಲಾಗಿದ್ದು, ರವಿವಾರ ಸಂಜೆಯಿಂದಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದರು.
ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಚರ್ಚೆ ನಡೆಸಿ ಬ್ಯಾರಿಕೇಡ್ ತೆರವಿಗೆ ಕ್ರಮ ವಹಿಸಲಾಗಿದೆ.
ಸರಣಿ ರಜೆ ಹಾಗೂ ವಾರಾಂತ್ಯದಲ್ಲಿ ಪ್ರವಾಸಿಗರ ದಟ್ಟಣೆ ಉಂಟಾದ ಸಂದರ್ಭದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ವಾಹನ ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆಯ ಮಾರ್ಗ ಸೂಚಿಯಂತೆ ನಗರಸಭೆಯ ಅನುದಾನದಿಂದ ಶೀಘ್ರದಲ್ಲಿ ಕಲ್ಸಂಕದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗುವುದು ಎಂದರು.