ಉಡುಪಿ: ರಾಷ್ಟ್ರೋತ್ಥಾನ ಪರಿಷತ್ ಗೆ 60 ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಇದರ ಭಾಗವಾಗಿ ಉಡುಪಿ ಜಿಲ್ಲೆಯ ಚೇರ್ಕಾಡಿಯಲ್ಲಿ ನೂತನ ಶಾಲೆ 2025ರ ಮೇ ಯಿಂದ ಕಾರ್ಯಾರಂಭವಾಗಲಿದೆ ಎಂದು ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾರಾವಿ ದಿನೇಶ್ ಹೆಗ್ಡೆ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ 9 ಜಿಲ್ಲೆಗಳಲ್ಲಿ ರಾಷ್ಟ್ರೋತ್ಥಾನ ಪರಿಷತ್ ನ 14 ಸಿಬಿಎಸ್ಇ ಶಾಲೆಗಳಲ್ಲಿ 15 ಸಾವಿರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಮುಂದೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆ ಇದೆ ಎಂದರು.
ಚೇರ್ಕಾಡಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ 8 ನೇ ತರಗತಿಯವರೆಗೆ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮುಂದಿನ ವರ್ಷ ಎಪ್ರಿಲ್ 30 ರಂದು ಶಾಲಾ ಕಟ್ಟಡ ಉದ್ಘಾಟನೆಗೊಳ್ಳಲಿದ್ದು, ಮೇ ತಿಂಗಳಿನಿಂದ ಶಾಲೆ ಕಾರ್ಯಾರಂಭವಾಗಲಿದೆ. ಹುಡುಗ/ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸ್ಥಾನೀಯ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಕಾರ್ಯದರ್ಶಿ ಋಷಿ ರಾಜ್, ರವಿ ಕುಮಾರ್, ಪ್ರಾಂಶುಪಾಲೆ ಭಾಗ್ಯಶ್ರೀ ಐತಾಳ್ ಉಪಸ್ಥಿತರಿದ್ದರು.