ಉಡುಪಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇಕಡ 17 ರಷ್ಟು ಹೆಚ್ಚು ಮಳೆಯಾಗಿದೆ. ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸರ್ಕಾರಿ ಕಟ್ಟಡಗಳು, ಸೇತುವೆ ಸೇರಿದಂತೆ ಮತ್ತಿತ್ತರ ಆಸ್ತಿ ಪಾಸ್ತಿಗಳಿಗೆ ಹಾನಿವುಂಟಾಗಿದೆ. ಈ ಸಂಬಂಧ ಈಗಾಗಲೇ ಬೆಳೆಹಾನಿ, ಮಾನವನಹಾನಿಗೆ ಸೇರಿದಂತೆ ಮತ್ತಿತ್ತರ ಹಾನಿಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದರು.
ನವೆಂಬರ್ ತಿಂಗಳಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸುವ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಈಗಾಗಲೇ ಶೇಡಕ 50ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲಾಗಿದೆ. ಬಾಕಿ ಉಳಿದಿರುವುದಕ್ಕೆ ಡಿಸೆಂಬರ್ 20 ರೊಳಗೆ ಅಳವಡಿಸಲು ಸೂಚನೆ ನೀಡಲಾಯಿತು. ಹಾಳಾಗಿ ರುವ ಹಲಗೆಗಳನ್ನು ಬದಲಿಸಲು ದುರಸ್ತಿಗಾಗಿ ಅನುದಾನ ಸಹ ಬಿಡುಗಡೆ ಮಾಡಲಾಗಿದೆ. ಇವುಗಳನ್ನು ಸೂಕ್ತವಾಗಿ ಬಳಕೆ ಮಾಡಿಕೊಳ್ಳಲು ಸಚಿವರು ಸೂಚನೆ ನೀಡಿದರು.
ಕರಾವಳಿ ಭಾಗದ ಮೀನುಗಾರಿಕೆ ಚಟುವಟಿಕೆಗಳನ್ನು ಅನುಕೂಲವಾಗುವಂತೆ ಮಳೆಯಿಂದ ಹಾನಿಯಾಗಿರುವ ರಸ್ತೆ, ದುರಸ್ತಿ ಕಾಮಗಾರಿಗೆ ಅನುದಾನ ಕೋರಿ ಅಧಿವೇಶನದ ವೇಳೆ ಸಿಎಂ ಭೇಟಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ನದಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದ ಸಚಿವರು, ವರಾಹಿ ನೀರಾವರಿ ಯೋಜನೆಗೆ 9 ಕಿಲೋಮೀಟರ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಪೂರ್ವನುಮತಿ ನೀಡಿದೆ. ಕಾಮಗಾರಿ ಕೈಗೊಳ್ಳಲು ಯಾವುದೇ ಅಭ್ಯಂತರವಿಲ್ಲ. ಇದರಿಂದ 2700 ಹೆಕ್ಟೇರ್ ನೀರಾವರಿ ಪ್ರದೇಶಗಳಿಗೆ ಅನುಕೂಲವಾಗಲಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಉಡುಪಿ ಜಿಲ್ಲೆಗೆ ಈಗಾಗಲೇ ಹೊಸದಾಗಿ ಎರಡು ಹಾಸ್ಟೆಲ್ ಗಳು ಮಂಜೂರಾಗಿದ್ದು,ಹೆಚ್ಚುವರಿ ಹಾಸ್ಟೆಲ್ ಗಳನ್ನು ತೆರೆಯಲು ಸಭೆಯಲ್ಲಿ ಶಾಸಕರು ಸಚಿವರಿಗೆ ಮನವಿ ಮಾಡಿದರು.
ಗ್ರಾಮೀಣ ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಸರಿಯಾಗಿ ಘನತಾಜ್ಯ ವಿಲೇವಾರಿ ಆಗುತ್ತಿಲ್ಲ. ಇದನ್ನೂ ಕೂಡಲೇ ಬಗೆಹರಿಸಿ, ಜಿಲ್ಲೆಯನ್ನು ತ್ಯಾಜ್ಯ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಮಾಡಲು ಈಗಾಗಲೇ ಜಮೀನು ಮಂಜೂರಾಗಿದ್ದು, 69 ಏಕರೆ ವ್ಯಾಪ್ತಿಯಲ್ಲಿರುವ ಮರಗಳನ್ನು ತೆರವುಗೊಳಿಸುವ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಮರ ತೆರವುಗೊಳಿಸುವ ಸಂದರ್ಭದಲ್ಲಿ ಆದಷ್ಟು ಮರಗಳನ್ನು ಉಳಿಸಿಕೊಳ್ಳಲು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್.ವಿ, ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕೆಡಿಪಿ ಸದಸ್ಯರು ಉಪಸ್ಥಿತರಿದ್ದರು.