ಉಡುಪಿ: ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಶೀರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ಜನವರಿ 17 ರಂದು ಬೆಳಿಗ್ಗೆಯಿಂದ ರಾತ್ರಿಯ ತನಕ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಳಗದ ಅಧ್ಯಕ್ಷರಾದ ಯತೀಶ್ ಕರ್ಕೇರಾ ಹೇಳಿದರು.

ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9 ಗಂಟೆಗೆ ಕುಣಿತ ಭಜನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ವಿವಿಧ ತಾಲೂಕುಗಳಿಂದ ಭಜನಾ ತಂಡಗಳು ಕುಣಿತ ಭಜನೆಯನ್ನು ಪ್ರದರ್ಶಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ರಾಜ್ಯ ಮಟ್ಟದ ಭಕ್ತಿ ಪ್ರಧಾನ ನೃತ್ಯ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳಿದ್ದು, ಭಾಗವಹಿದ ತಂಡಗಳಿಗೆ ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು. ರಾತ್ರಿ 7 ಗಂಟೆಗೆ ಉಡುಪಿ ಜಿಲ್ಲೆಯ ಪ್ರಸಿದ್ದ ಮೆಕ್ಕೆಕಟ್ಟೆ ಮೇಳದವರಿಂದ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಖ್ಯಾತ್ ಶೆಟ್ಟಿ, ಕೃಷ್ಣ ಶೆಟ್ಟಿ ಬಜಗೋಳಿ, ಮುರಳಿ ಶೆಟ್ಟಿ, ಅಕ್ಷತ್ ಪೈ, ಸುಧಾಕರ್, ಸೂರಜ್ ಕಲ್ಮಾಡಿ ಉಪಸ್ಥಿತರಿದ್ದರು.