ಉಡುಪಿ: ಸಹಕಾರಿ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಬದಲಾವಣೆಗಳನ್ನು ತರುತ್ತಿದ್ದು, ಸಹಕಾರಿ ಸಂಸ್ಥೆಗಳು ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸೇವೆ ನೀಡದಿದ್ದರೆ ಖಾಸಗಿ ಹಾಗೂ ವಾಣಿಜ್ಯ ಬ್ಯಾಂಕ್‌ಗಳ ಪೈಪೋಟಿ ನಡುವೆ ವ್ಯವಹಾರ ನಡೆಸುವುದು ಕಷ್ಟವಾಗಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಉಡುಪಿಯ ಅಜ್ಜರಕಾಡು ಪುರಭವನದ ಮಿನಿ ಹಾಲ್‌ನಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ 2025–26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಸಹಕಾರಿ ಸಂಸ್ಥೆಗಳು ವಿವಿಧೋದ್ದೇಶ ಸಹಕಾರಿ ಸಂಸ್ಥೆಗಳಾಗಿ ಪರಿವರ್ತನೆಗೊಂಡು ಹೆಚ್ಚಿನ ರೀತಿಯ ವ್ಯವಹಾರ ಹಾಗೂ ಸೇವೆಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. ಪ್ರಸ್ತುತ ಠೇವಣಿ ಸ್ವೀಕರಿಸಿ ಅಗತ್ಯವಿರುವವರಿಗೆ ಸಾಲ ನೀಡುವುದು ಸಹಕಾರಿ ಸಂಸ್ಥೆಗಳ ಪ್ರಮುಖ ವ್ಯವಹಾರವಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಜನರ ವಿವಿಧ ಅಗತ್ಯತೆಗಳಿಗೆ ಬೇಕಾದ ಸೌಲಭ್ಯಗಳನ್ನು ಸಹಕಾರಿ ಸಂಸ್ಥೆಗಳ ಮೂಲಕವೇ ಒದಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಹಕಾರಿ ಸಂಸ್ಥೆಗಳು ಸಿದ್ಧಗೊಳ್ಳಬೇಕು ಎಂದರು.
ಖಾಸಗಿ ಹಾಗೂ ವಾಣಿಜ್ಯ ಬ್ಯಾಂಕ್‌ಗಳ ಪೈಪೋಟಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಹಕಾರಿ ಸಂಸ್ಥೆಗಳು ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ‘ಅಪ್‌ಡೇಟ್’ ಆಗಬೇಕು. ಕಾಲಕ್ಕೆ ತಕ್ಕ ಬದಲಾವಣೆಗಳನ್ನು ತಮ್ಮ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸುವ ಮೂಲಕ ಸದಸ್ಯರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ಸಹಕಾರಿ ಸಂಸ್ಥೆಗಳ ಬೆಳವಣಿಗೆಗೆ ಶ್ರಮಿಸಬೇಕು. ಈ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯನ್ನು ಉತ್ತಮ ಜಿಲ್ಲೆಯನ್ನಾಗಿ ರೂಪಿಸಬೇಕು ಎಂದು ಹೇಳಿದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ, ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ನಿರ್ದೇಶಕರಾದ ಎಚ್. ಗಂಗಾಧರ ಶೆಟ್ಟಿ, ಸುಧೀರ್ ವೈ., ಅನಿಲ್ ಎಸ್. ಪೂಜಾರಿ, ಪ್ರಸಾದ್ ಎಸ್. ಶೆಟ್ಟಿ, ಎನ್. ಮಂಜಯ್ಯ ಶೆಟ್ಟಿ, ಬಿ. ಪ್ರದೀಪ್ ಯಡಿಯಾಳ, ಅರುಣ್ ಕುಮಾರ್ ಹೆಗ್ಡೆ, ಬಿ. ಕರುಣಾಕರ ಶೆಟ್ಟಿ, ಸುರೇಶ್ ರಾವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಿರ್ದೇಶಕ ಹರೀಶ್ ಕಿಣಿ ಅಲೆವೂರು ವಂದಿಸಿದರು. ನಿರ್ದೇಶಕ ಶ್ರೀಧರ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

