ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಿದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಬಳಿಕ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನದ ವೇಳೆ ದೇವಸ್ಥಾನದಲ್ಲಿ ಭಕ್ತರ ಸಂಚಾರವನ್ನು ನಿಯಂತ್ರಿಸಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ದೇವಸ್ಥಾನಕ್ಕೆ ಆಗಮಿಸುವ ಮಾರ್ಗಗಳಲ್ಲಿಯೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ದೇವಸ್ಥಾನದ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ವಿಜಯ್ ಅವರನ್ನು ಕಂಡು ಸಂಭ್ರಮಿಸಿದರು.