ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ಉಚ್ಚಾಟಿಸಿ ಆದೇಶಿಸಲಾಗಿದೆ.
ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಪಕ್ಷದ ಚೌಕಟ್ಟು ಮೀರಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಾಯಕರ ಮೇಲೆ ಸುಳ್ಳು ಕೇಸನ್ನು ದಾಖಲಿಸಿದ್ದು, ಪಕ್ಷಕ್ಕೆ ತಾವು ಮುಜುಗರ ಮಾಡುವಂತ ಸನ್ನಿವೇಶವನ್ನು ನಿರ್ಮಾಣ ಮಾಡಿದ ಕಾರಣಕ್ಕಾಗಿ ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈಗಾಗಲೇ ಪಂಚಾಯತ್‌ಗೆ ಸಂಬಂಧ ಪಟ್ಟ ಕೆಲವೊಂದು ನಿರ್ಧಾರಗಳನ್ನು ಪಕ್ಷದ ಪಂಚಾಯತ್ ಸದಸ್ಯರ ಗಮನಕ್ಕೆ ತರದೆ ಭ್ರಷ್ಟಾಚಾರ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು ಹಾಗು ತಮ್ಮ ಅಶಿಸ್ತಿನ ವರ್ತನೆಗಾಗಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಬಿಜೆಪಿಯಿಂದ ಉಚ್ಚಾಟನೆ ಗೊಂಡ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.26 ಸದಸ್ಯ ಬಲದ ತೆಂಕನಿಡಿಯೂರು ಗ್ರಾಪಂನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿತ 14 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದರು.

