ಉಡುಪಿ: ವೀಕೆಂಡ್ ಹಿನ್ನೆಲೆಯಲ್ಲಿ ಮಲೆನಾಡಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ. ಚಿಕ್ಕಮಗಳೂರು, ಕಳಸ, ಕುದುರೆಮುಖ ಸೇರಿದಂತೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಮಂದಿ ಆಗಮಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಪಾತಗಳು ಮೈದುಂಬಿ ಹರಿಯುತ್ತಿರುವ ದೃಶ್ಯಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಪ್ರಮುಖ ಜಲಪಾತಗಳಲ್ಲಿ ಪ್ರವಾಸಿಗರ ದಂಡು ಕಂಡುಬಂದಿದ್ದು, ಹೋಂಸ್ಟೇಗಳು ಹಾಗೂ ಹೋಟೆಲ್ಗಳು ಬಹುತೇಕ ಭರ್ತಿಯಾಗಿವೆ.
ಆದರೆ ನಿರಂತರ ಮಳೆಯಿಂದಾಗಿ ಜಲಪಾತಗಳಲ್ಲಿ ನೀರಿನ ಹರಿವು ಅಪಾಯದ ಮಟ್ಟ ತಲುಪಿರುವುದರಿಂದ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ. ಬಂಡೆಗಳ ಮೇಲೆ ನಿಂತು ಸೆಲ್ಫಿ, ಫೋಟೋಶೂಟ್ ಹಾಗೂ ವೆಡ್ಡಿಂಗ್ ಶೂಟ್ ನಡೆಸುವುದು ಜೀವಕ್ಕೆ ಅಪಾಯಕಾರಿಯಾಗಬಹುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ಅಪಾಯಕಾರಿ ಜಲಪಾತಗಳು ಹಾಗೂ ನದಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕೃತಿಯ ಸೌಂದರ್ಯವನ್ನು ಸವಿಯುವ ಸಂದರ್ಭದಲ್ಲೂ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಆಡಳಿತ ಹಾಗೂ ಸ್ಥಳೀಯರು ಮನವಿ ಮಾಡಿದ್ದಾರೆ.

