ಉಡುಪಿ: ರಾಜ್ಯ ಸರ್ಕಾರ ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ನಿರ್ಧಾರವನ್ನು ತಕ್ಷಣ ಹಿಂಪಡೆದು ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾ ಕಾರ್ಯದರ್ಶಿ ನಸೀಮಾ ಝರೈ ಆಗ್ರಹಿಸಿದರು.

ನಗರದ ಜೋಡುಕಟ್ಟೆ ಸಮೀಪ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಸಾಮಾನ್ಯ ಜನರ ಬದುಕಿನ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ ಎಂದು ದೂರಿದರು.

ಈಗಾಗಲೇ ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಜನಸಾಮಾನ್ಯರಿಗೆ ಬೆಲೆ ಏರಿಕೆ ಮತ್ತಷ್ಟು ಹೊರೆಯಾಗಲಿದೆ. ದಿನನಿತ್ಯದ ಅಗತ್ಯ ವಸ್ತುವಾಗಿರುವ ಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಹೆಚ್ಚಳವು ಕುಟುಂಬಗಳ ಆರ್ಥಿಕ ಸ್ಥಿತಿಯ ಮೇಲೆ ನೇರ ಪರಿಣಾಮ ಬೀರಲಿದೆ.

ಆದ್ದರಿಂದ ಜನರ ಮೇಲೆ ಹೆಚ್ಚುವರಿ ಹೊರೆ ಹೇರುವ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ನಾಸೀರ್ ಹಸ್ರತ್ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.